ತುಮಕೂರು ಜಿಲ್ಲಾಧಿಕಾರಿ ವೈಎಸ್ ಪಾಟೀಲ್ ರಿಂದ ಗ್ರಾಮವಾಸ್ತವ್ಯ.

ತುಮಕೂರು: ಕೆಲವು ಹಳ್ಳಿಗಳಲ್ಲಿ ಸರಕಾರದಿಂದ ಜಾರಿಯಾಗುವ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಮಾಹಿತಿಯೇ ಇರುವುದಿಲ್ಲ. ಈ ಯೋಜನೆಗಳ ಮಾಹಿತಿ ಹಾಗೂ ಸೌಲಭ್ಯವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದುತುಮಕೂರು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಿಳಿಸಿದರು.

ಕಂದಾಯ ಇಲಾಖೆಯ ’ಜಿಲ್ಲಾಧಿಕಾರಿಗಳ ನಡೆ-ಗ್ರಾಮಗಳ ಕಡೆ’ ಕಾರ್ಯಕ್ರಮದಡಿ ಜಿಲ್ಲೆಯ ಮಧುಗಿರಿ ತಾಲೂಕು ಲಕ್ಷ್ಮೀಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಗ್ರಾಮ ವಾಸ್ತವ್ಯದ ಕಾರ್ಯಕ್ರಮದಲ್ಲಿ ಜನರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು ಸರ್ಕಾರಿ ಯೋಜನೆಗಳ ಸೌಲಭ್ಯವನ್ನು ಫಲಾನುಭವಿಗಳಿಗೆ ತಲುಪಿಸುವುದು, ಪಹಣಿ ತಿದ್ದುಪಡಿ, ಪೌತಿ ಖಾತೆ, ಮಾಶಾಸನ ಸೌಲಭ್ಯ ನೀಡುವುದು ಗ್ರಾಮ ವಾಸ್ತವ್ಯದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಪ್ರೀತಿಯಿಂದಲೇ ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು ಸ್ಥಳದಲ್ಲಿ ಕಂಡುಕೊಳ್ಳಬಹುದಾದ ಸಮಸ್ಯೆಗಳನ್ನು ಬಗೆಹರಿಸಿ, ಉಳಿದ ಸಮಸ್ಯೆಗಳನ್ನು ಬಗೆಹರಿಸಲು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ 120 ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಈ ಪೈಕಿ ಮಾಸಾಶನ ಸಂಬಂಧ ಗ್ರಾಮದ 6 ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿ, ಮಾಶಾಸನ ಕೊಡುವ ಆದೇಶ ಪ್ರತಿಗಳನ್ನು ವಿತರಿಸಲಾಯಿತು.

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಸರಕಾರದ ನಿರ್ದೇಶನದ ಅನ್ವಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಡಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮ ಕಂದಾಯ ಇಲಾಖೆಯ ಕಾರ್ಯಕ್ರಮವಾಗಿದ್ದರೂ, ವಿವಿಧ ಇಲಾಖೆಗಳ ಅಧಿಕಾರಿಗಳೂ ಸಹ ವಾಸ್ತವ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಆಯಾ ಇಲಾಖೆಯ ಸಮಸ್ಯೆ ಆಲಿಸುವ ಕೆಲಸ ಮಾಡಲಾಗಿದೆ ಎಂದು ಹೇಳಿದರು.

ಸ್ವೀಕರಿಸಿದ ಕೆಲವು ಅರ್ಜಿಗಳು ನ್ಯಾಯಾಲಯಕ್ಕೆ ಸಂಬಂಧಿಸಿವೆ. ಹಾಗಾಗಿ ಅಂತಹ ಅರ್ಜಿಗಳ ಸಮಸ್ಯೆಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಬಗೆಹರಿಸಲಾಗುವುದು. ಸ್ವೀಕೃತ ಅರ್ಜಿಗಳ ಪೈಕಿ ಸಾಗುವಳಿ ಚೀಟಿ, ಪೌತಿ ಖಾತೆ ಸಮಸ್ಯೆಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಸಮಸ್ಯೆಯನ್ನು ವಿಳಂಬ ಮಾಡದೆ ಬಗೆಹರಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದರು.

ವೈಯಕ್ತಿಕ ಸಮಸ್ಯೆಗಳ ಬಗ್ಗೆಯೂ ಅಹವಾಲುಗಳು ಬಂದಿದ್ದು ವೈಯಕ್ತಿಕ ಸಮಸ್ಯೆ ಬಗೆಹರಿಸುವ ಬಗ್ಗೆ ಸರಕಾರದ ಗಮನಕ್ಕೆ ತರಲಾಗುವುದು ಎಂದು ಅವರು ತಿಳಿಸಿದರು. ವೈಯಕ್ತಿಕ ಸಮಸ್ಯೆಗಳಲ್ಲದೇ ಸಾರ್ವಜನಿಕ ರಸ್ತೆ, ಶಾಲೆ, ಕಟ್ಟಡ, ಆವರಣ, ಸ್ಮಶಾನ ಅಭಿವೃದ್ಧಿ ಮಾಡುವಂತೆಯೂ ಜನರಿಂದ ಬೇಡಿಕೆಗಳು ಬಂದಿವೆ. ಈ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

Leave a Reply

Your email address will not be published. Required fields are marked *

error: Content is protected !!